ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಮೊಂಟೆಪದವು :ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವಲ್ಲಿ ನಿಟ್ಟಿನಲ್ಲಿ ರಾಜ್ಯ ಸರಕಾರವು ಹಲವಾರು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಂದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದರು.
ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಸೋಮವಾರ ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ವಾಭಿಮಾನವನ್ನು ಬೆಳೆಸಿ ಉತ್ತಮ ಶಿಕ್ಷಣವನ್ನು ನೀಡುವಲ್ಲಿ ಕರ್ನಾಟಕ ಸರಕಾರವು ಈಗಾಗಲೇ ಕ್ಷೀರ ಭಾಗ್ಯದಂತಹ ಹಲವಾರು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು. ಮೊಂಟೆಪದವು ಶಾಲೆಯು ಇದೀಗ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತಿದ್ದು ಇಲ್ಲಿಯ ಮೂಲಭೂತ ಸೌಲಭ್ಯಗಳು ವಿಸ್ತಾರಗೊಂಡಿದೆ. ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನೂತನ ಕಟ್ಟಡವು ನಿರ್ಮಾಣಗೊಳ್ಳಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ ಮಾತನಾಡಿ, ಹಿಂದಿನ ಕಾಲದಲ್ಲಿ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ಸಿಗುತ್ತಿರಲಿಲ್ಲ, ಆದರೆ ಇದೀಗ ಶಿಕ್ಷಣಕ್ಕೆ ಸರಕಾರದ ವತಿಯಿಂದ ಉತ್ತಮ ಪ್ರೋತ್ಸಾಹ ಸಿಗುತ್ತಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸರಕಾರದಿಂದ ಉಚಿತ ಸೈಕಲನ್ನು ಸಚಿವರು ವಿದ್ಯಾರ್ಥಿಗಳಿಗೆ ಒದಗಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ, ನರಿಂಗಾನ ಪಂಚಾಯಿತಿ ಸದಸ್ಯ ಇಸ್ಮಾಯಿಲ್ ಮೀನಂಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಕಾಂಗ್ರೆಸ್ ಮುಖಂಡರಾದ ಪದ್ಮನಾಭ ನರಿಂಗಾನ, ಸಿದ್ದಿಕ್ ಪಾರೆ, ಅಬ್ದುಲ್ ರಹಿಮಾನ್, ನಾಸೀರ್ ನಡುಪದವು, ನಾಸೀರ್ ಸಾಮಣಿಗೆ, ಐತಪ್ಪ ಶೆಟ್ಟಿ, ಮುರಳೀಧರ ಶೆಟ್ಟಿ, ನಳಿನಾಕ್ಷಿ, ಅಬೂಬಕ್ಕರ್, ಮಹಮ್ಮದ್ ಗಂಗಾಧರ್ ಮೊದಲಾದವರು ಉಪಸ್ಥಿತರಿದ್ದರು.
ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಂತೋಷ್ ಅವರು ಸ್ವಾಗತಿಸಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಮಮತಾ ವಂದಿಸಿದರು. ಅಬ್ದುಲ್ ಜಲೀಲ್ ಮೋಂಟುಗೋಳಿ ಕಾರ್ಯಕ್ರಮ ನಿರೂಪಿಸಿದರು.


