UN NETWORKS
ಕೊಣಾಜೆ: ಕ್ರೀಡೆಗೆ ಇಂದು ಬಹಳಷ್ಟು ಪ್ರೋತ್ಸಾಹ ದೊರೆಯುತ್ತಿದೆ. ಕ್ರೀಡಾಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಶಿಸ್ತು ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಅಂತರಾಷ್ಟ್ರೀಯ ವಾಲಿಬಾಲ್ ತರಬೇತುದಾರರಾದ ನಾರಾಯಣ ಆಳ್ವ ಅವರು ಅಭಿಪ್ರಾಯಪಟ್ಟರು.
ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಈಶ್ವರ ಪಿ. ಅವರು, ಮಂಗಳೂರು ವಿಶ್ವವಿದ್ಯಾಲಯವು ಕಳೆದ ಹಲವಾರು ವರ್ಷಗಳಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಪರಿಣಾಮ ಅಥ್ಲೆಟಿಕ್ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಹಲವು ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿದ್ಯಾರ್ಥಿ ಸಮುದಾಯ ಹೆಚ್ಚಾಗಿ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ.ಕಿಶೋರ್ ಕುಮಾರ್ ಸಿ.ಕೆ ಅವರು, ಮಂಗಳೂರು ವಿಶ್ವವಿದ್ಯಾಲಯವು ಕ್ರೀಡಾ ಕ್ಷೇತ್ರಕ್ಕೆ ಇಂದು ಉತ್ತಮ ಪ್ರೋತ್ಸಾಹ ನೀಡುತ್ತಿರುವ ಪರಿಣಾಮ ಹೆಚ್ಚೆಚ್ಚು ವಿದ್ಯಾರ್ಥಿಗಳು ಕ್ರೀಡಾ ಚಟುವಟಕೆಯಲ್ಲಿ ಭಾಗವಹಿಸುವುದರೊಂದಿಗೆ ಸಾಧನೆ ಮರೆಯುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಡಾ.ಹರಿದಾಸ್ ಕೂಳೂರು, ಪ್ರಸನ್ನ, ರಮೇಶ್, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಿಯಾ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.