Site icon Ullalavani

ಶೈಕ್ಷಣಿಕ ಆಯ್ಕೆಗಳು ಉತ್ತಮವಾಗಿದ್ದರೆ ಉಜ್ವಲ ಭವಿಷ್ಯ : ಪ್ರೊ.ಎಂ.ಎಸ್. ಮೂಡಿತ್ತಾಯ

UN NETWORKS

ಕೊಣಾಜೆ : ನಮ್ಮ ಶೈಕ್ಷಣಿಕ ವ್ಯವಸ್ಥೆಯೂ ಕೂಡಾ ಕಾಲಕ್ಕೆ ಅನುಗುಣವಾಗಿ ಬದಲಾವಣೆಯನ್ನು ಕಂಡುಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಪ್ರಸ್ತುತ ವಿದ್ಯಾರ್ಥಿಗಳಿಗೆ ಹಲವು ಅವಕಾಶಗಳಿದ್ದು ಸದುಪಯೋಗ ಪಡಿಸಿಕೊಳ್ಳಬೇಕು. ಶೈಕ್ಷಣಿಕ ಜೀವನದಲ್ಲಿ ನಾವಿಡುವ ಹೆಜ್ಜೆ ಮತ್ತು ಆಯ್ಕೆಗಳ ಬಗ್ಗೆ ಹೆಚ್ಚಿನ ಗಮನ ನೀಡುವುದರೊಂದಿಗೆ ಮಾಹಿತಿ ಪಡೆದುಕೊಂಡು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಸಹ ಕುಲಪತಿ ಪ್ರೊ.ಎಂ.ಎಸ್. ಮೂಡಿತ್ತಾಯ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾಲಯದ ಉಪನ್ಯಾಸ ಸಭಾಂಗಣದಲ್ಲಿ ಶುಕ್ರವಾರ ಓಪನ್ ಹೌಸ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಮಂಗಳೂರು ವಿಶ್ವವಿದ್ಯಾಲಯವು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು ಓಪನ್ ಹೌಸ್ ನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಆಯ್ಕೆಗಳ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಿಕೊಡುವಲ್ಲಿ ಸಹಕಾರಿಯಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. .ಪಿ.ಎಸ್.ಯಡಪಡಿತ್ತಾಯ ಹಿಂದಿನ ಕಾಲದಲ್ಲಿ ಶೈಕ್ಷಣಿಕ ವಿಷಯಗಳ ಆಯ್ಕೆ ಮಾಡಿಕೊಳ್ಳುವ ಬಗ್ಗೆ ಸರಿಯಾದ ಮಾಹಿತಿಯೂ ಇಲ್ಲದೆ ಗೊಂದಲಗಳಿದ್ದುವು. ಆದರೆ ಇಂದು ಕಾಲ ಬದಲಾಗಿದ್ದು ವಿದ್ಯಾರ್ಥಿಗಳಿಗೆ ಅವಕಾಶಗಳು ಮತ್ತು ಶೈಕ್ಷಣಿಕ ಆಯ್ಕೆಗಳ ಬಗ್ಗೆ ಉಪಯುಕ್ತ ಮಾಹಿತಿ ಸಿಗುತ್ತಿವೆ. ಆದರೆ ನಾವು ಯಾವುದೇ ವಿಷಯವನ್ನು ಆಯ್ಕೆ ಮಾಡಿದ ನಂತಹ ಕಠಿಣ ಪರಿಶ್ರಮ ಮತ್ತು ಆ ವಿಷಯವನ್ನು ಪ್ರೀತಿಸುವುದನ್ನು ಕಲಿಯಬೇಕು. ಆಗ ನಾವು ಸಾಗುವ ದಾರಿಯಲ್ಲಿ ಯಾವುದೇ ಅಡೆತಡೆಗಳಿದ್ದರೂ ಯಶಸ್ವಿಯತ್ತ ಸಾಗುತ್ತೇವೆ ಎಂದರು.

ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರವೀಂದ್ರಾಚಾರಿ ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎ.ಎಂ. ಖಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾದ್ಯಾಪಕ ಡಾ. ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಯೋಜಕ ಪ್ರೊ. ಪಿ.ಎಲ್. ಧರ್ಮ ವಂದಿಸಿದರು.

Exit mobile version