Site icon Ullalavani

ತಲಪಾಡಿ ಬಸ್ ಅಪಘಾತ ಆರು ಮಂದಿ ಮೃತ್ಯು – ಮೃತಪಟ್ಟವರ ಕುಟುಂಬಸ್ಥರಿಗೆ ಸ್ಪೀಕರ್ ಖಾದರ್ ಸಾಂತ್ವನ

ಮಂಗಳೂರು : ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಈ ಘಟನೆಗೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವ ಅವರು ಆಸ್ಪತ್ರೆಗೆ ಧಾವಿಸಿ ಬಂದು ಆಸ್ಪತ್ರೆಯ ವೈದ್ಯರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗನೇ ಪೋಸ್ಟ್ ಮಾರ್ಟಂ ಹಾಗೂ ಇತರ ಕಾರ್ಯಗಳನ್ನು ಪೂರೈಸಿ ಸಂಬಂಧಪಟ್ಟ ಕುಟುಂಬದವರಿಗೆ ಮೃತದೇಹಗಳನ್ನು ಹಸ್ತಾಂತರಿಸುವ ಕುರಿತು ಸೂಚನೆ ನೀಡಿದರು.

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿರವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಸೂಚನೆ ನೀಡಿ ಹಾಗೂ ಮೃತರ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ವತಿಯಿಂದ ಪರಿಹಾರ ಒದಗಿಸಬೇಕೆಂದು ಸಭಾಧ್ಯಕ್ಷ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

Exit mobile version