ಬೆಂಗಳೂರು : ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಹಿತ ಮೂವರು ಸಾಧಕರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯವು ತಿಳಿಸಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ.ಮಾದೇಗೌಡ ಹಾಗೂ ಜೆ.ಪಿ.ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ.
ಅ.8ರಂದು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ 60ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ವಿವಿ ಹೇಳಿದೆ.
ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಯು.ಟಿ.ಖಾದರ್ : ಕಾನೂನು ಪದವೀಧರರಾಗಿರುವ ಯು.ಟಿ.ಖಾದರ್ ಅವರು ಮಾಜಿ ಶಾಸಕ ದಿವಂಗತ ಯು.ಟಿ.ಫರೀದ್ ಅವರ ಪುತ್ರ. ಎನ್‌ಎಸ್ ಯುಐ, ಯುವ ಕಾಂಗ್ರೆಸ್ ಹಾಗೂ ಸೇವಾದಳಗಳ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದ ಯು.ಟಿ.ಖಾದರ್, ಇದೀಗ ಮಂಗಳೂರು ಕ್ಷೇತ್ರ ಎಂದಾಗಿರುವ ಉಳ್ಳಾಲ ವಿಧಾನಸಭಾ ಕ್ಷೇತ್ರವನ್ನು ಸತತ ಐದು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ. ಆರೋಗ್ಯ, ಆಹಾರ, ವಸತಿ ಹಾಗೂ ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2023ರಿಂದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರು ರೈಡರ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾಗಿರುವ ಯು.ಟಿ.ಖಾದರ್, ವಿದ್ಯಾರ್ಥಿ ಜೀವನದಲ್ಲಿ ರಾಜ್ಯ, ರಾಷ್ಟ್ರೀಯ ಮೋಟರ್ ಕ್ರಾಸ್ ರೇಸ್ ಗಳಲ್ಲಿ ಪ್ರಶಸ್ತಿ ಗಳಿಸಿದ್ದಾರೆ.