ಬಂಟ್ವಾಳ, ಫೆ. 27: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಬಿ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಅಬ್ದುಲ್ ರಜಾಕ್ ಹಾಗೂ ಫೆಬಿಯಸ್ ಜೈಸನ್ ಪಿರೇರಾ (24) ಎಂದು ಗುರುತಿಸಲಾಗಿದೆ.
ಫೆ 25 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಪಲ್ಲಮಜಲು ಎಂಬಲ್ಲಿ, ಸಾರ್ವಜನಿಕ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಖಚಿತ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಅಲ್ಲದೆ ಇವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.