ಏ. 09 ; ಕೇರಳದ 140, ಅಸ್ಸಾಂನ 126 ಹಾಗೂ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಮೂರೂ ರಾಜ್ಯಗಳಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, 6 ಗಂಟೆಯವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮತದಾನ ಕೇಂದ್ರಗಳ ಬಳಿ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸಲಾಗಿದ್ದು, ಸುಗಮ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.ಚುನಾವಣೆ ಹಿನ್ನೆಲೆ ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ. “2026 ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೇರಳದ ಜನರಿಗೆ ನಾನು ಮನವಿ ಮಾಡುತ್ತೇನೆ. ದಾಖಲೆಯ ಭಾಗವಹಿಸುವಿಕೆಯು ಕೇರಳದ ಪ್ರಜಾಪ್ರಭುತ್ವ ಮನೋಭಾವವನ್ನು ಮತ್ತಷ್ಟು ಬಲಪಡಿಸುತ್ತದೆ. ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರು ಮುಂದೆ ಬಂದು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

