ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮ ಪಂಚಾಯಿತಿಯಲ್ಲಿ ಸೋಲಾರ್ ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ತನಿಖೆಗೆ ಆದೇಶ ನೀಡಲಾಗಿದೆ.

ಹೌದು, ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮ ಪಂಚಾಯಿತಿಯಲ್ಲಿ ಸೋಲಾರ್ ದಾರಿದೀಪ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಡೆನಿಲ್ ಫಾಸ್ಕಲ್ ಪಿಂಟೋ ಅವರು ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಭಾ.ಆ.ಸೇ., ಅವರು ತನಿಖೆಗೆ ಆದೇಶ ನೀಡಿದ್ದಾರೆ.
ಏಪ್ರಿಲ್ 9ರಂದು ಮಧ್ಯಾಹ್ನ 11 ಗಂಟೆಗೆ ಉಳ್ಳಾಲ ತಾಲೂಕು ಪಂಚಾಯತ್ ಕಚೇರಿಯಲ್ಲಿ ದಾಖಲೆಗಳ ಸಮೇತ ತನಿಖೆ ನಡೆಯಿತು. ತನಿಖಾ ವೇಳೆ ಬೋಳಿಯಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.
“ಉಳ್ಳಾಲ ತಾಲೂಕಿನಾದ್ಯಂತ ಬೀದಿ ದೀಪ ಅಳವಡಿಕೆಯಲ್ಲಿ ಹಗರಣ ನಡೆಯುತ್ತಿದೆ. ಇದರ ಹಿಂದೆ ರಾಜಕೀಯ ಪ್ರಭಾವವೂ ಕಾಣಿಸುತ್ತಿದೆ. ತನಿಖೆಯಿಂದ ನಿಜಾಂಶ ಹೊರಬರಲಿದೆ ಎಂಬ ವಿಶ್ವಾಸ ಇದೆ.”
ಉಳ್ಳಾಲ ಭಾಗದಲ್ಲಿ ಬೀದಿ ದೀಪ ಹಗರಣ ಹೆಚ್ಚುತ್ತಿರುವುದಾಗಿ ಸಾರ್ವಜನಿಕರು ಆರೋಪಿಸುತ್ತಿದ್ದು, ಈ ಪ್ರಕರಣದ ತನಿಖೆ ಈಗ ಹೆಚ್ಚಿನ ಕುತೂಹಲ ಮೂಡಿಸಿದೆ.


