ಪುತ್ತೂರು, ಏ. 20 : ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ನಡೆದ ವೈಭವದ ಸಿಡಿಮದ್ದು ಪ್ರದರ್ಶನದ ವೇಳೆ ಭಕ್ತರಿಗೆ ಕಿಡಿ ತಾಗಿದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ಕುಂದಾಪುರ ಮೂಲದ ಸುಮಂತ್ ಶೆಟ್ಟಿ, ಭರತ್, ಕೌಶಿಕ್, ಸೌಮ್ಯ, ದೀಪಕ್, ಯಶ್ವಂತ್, ಮೋಹನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸ್ನೇಹಿತರಾಗಿದ್ದು, ಎಲ್ಲರೂ ಪುತ್ತೂರು ಜಾತ್ರೆಗೆ ಆಗಮಿಸಿದ್ದರು ಎನ್ನಲಾಗಿದೆ. ಪ್ರಸ್ತುತ ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸುಮಂತ್ ಶೆಟ್ಟಿ ಎಂಬುವವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಡಿಮದ್ದು ಪ್ರದರ್ಶನವನ್ನು ನಿರ್ವಹಿಸುತ್ತಿದ್ದವರು ಮತ್ತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹೆಚ್ಚಿನ ತೀವ್ರತೆಯ ಸಿಡಿಮದ್ದುಗಳನ್ನು ಸಿಡಿಸುವಾಗ ಭಕ್ತರು ಮತ್ತು ಪ್ರದರ್ಶನದ ಸ್ಥಳದ ನಡುವೆ ಸೂಕ್ತ ಸುರಕ್ಷಿತ ಅಂತರ ಕಾಪಾಡಿಕೊಂಡಿರಲಿಲ್ಲ. ಆಯೋಜಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ದೂರಿನ ಅನ್ವಯ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಅನುಸರಿಸಲಾದ ಸುರಕ್ಷತಾ ಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನಕ್ಕೆ ಪಡೆದ ಅನುಮತಿಯ ನಿಯಮಗಳ ಉಲ್ಲಂಘನೆಯಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

