Site icon Ullalavani

ಕುರ್ನಾಡು ಗ್ರಾಮಪಂಚಾಯತ್ ನಿರ್ಲಕ್ಷ್ಯ : ಮುಡಿಪು ಕಾಲೇಜು ದ್ವಾರ ಬಳಿ ಕಸದ ರಾಶಿ, ವಿದ್ಯಾರ್ಥಿಗಳಿಗೆ ನರಕ ಯಾತನೆ

ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಜಂಕ್ಷನ್ ಹತ್ತಿರ, ಮುಡಿಪು ಕಾಲೇಜಿನ ದ್ವಾರದ ಬಳಿ ದಿನೇ ದಿನೇ ಹೆಚ್ಚುತ್ತಿರುವ ಕಸದ ರಾಶಿಯಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಿಕ್ಷಣ ಸಂಸ್ಥೆಯ ಪ್ರವೇಶ ದ್ವಾರವೇ ದುರ್ವಾಸನೆ ಮತ್ತು ಅಸ್ವಚ್ಛತೆಯ ಕೇಂದ್ರವಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ದಿನ ನೂರಾರು ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಕಾಲೇಜಿಗೆ ತೆರಳುತ್ತಿದ್ದು, ಕಸದ ರಾಶಿಯಿಂದ ಹರಡುವ ದುರ್ವಾಸನೆ, ಕೀಟಗಳು ಹಾಗೂ ಆರೋಗ್ಯ ಸಮಸ್ಯೆಗಳ ಭೀತಿ ಮಕ್ಕಳಿಗೆ ನರಕ ಯಾತನೆಯಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಉಳ್ಳಾಲ ತಾಲೂಕಿನ ಸ್ವಚ್ಚತಾ ಅಭಿಯಾನ ಕೇವಲ ಬ್ಯಾನರ್ ಮತ್ತು ಭಾಷಣಗಳಿಗೆ ಮಾತ್ರ ಸೀಮಿತವಾಗಿದೆಯೇ?” ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಲಕ್ಷಾಂತರ ರೂಪಾಯಿ ಸರ್ಕಾರಿ ಸಂಬಳ ಪಡೆಯುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಿಬ್ಬಂದಿ ಸಮಸ್ಯೆ ಬಗ್ಗೆ ಗಮನ ಹರಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕಸದ ತೆರವು, ಶಾಶ್ವತ ತ್ಯಾಜ್ಯ ನಿರ್ವಹಣೆ ಹಾಗೂ ಸ್ವಚ್ಛತಾ ಕ್ರಮಗಳ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜೀಪ್ ಕಚೇರಿ ವ್ಯವಸ್ಥೆ ಯಾಕೆ? ಜನರ ಸಮಸ್ಯೆ ಇರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲು ಅಲ್ಲವೇ?” ಎಂದು ಗ್ರಾಮಸ್ಥರು ತೀವ್ರವಾಗಿ ಪ್ರಶ್ನಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತದ ಮೊದಲ ಆದ್ಯತೆಯಾಗಬೇಕು. ಆದರೆ ಮುಡಿಪು ಕಾಲೇಜು ದ್ವಾರದ ಬಳಿ ಕಂಡುಬರುವ ಅಸ್ವಚ್ಛ ಪರಿಸ್ಥಿತಿ ಸಾರ್ವಜನಿಕ ಆರೋಗ್ಯದ ಮೇಲಿನ ನಿರ್ಲಕ್ಷ್ಯವನ್ನು ಬಯಲಿಗೆಳೆಯುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಸದ ರಾಶಿ ತೆರವುಗೊಳಿಸಿ, ಮುಡಿಪು ಕಾಲೇಜು ಪರಿಸರವನ್ನು ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣವನ್ನಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Exit mobile version