ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಗಳು, ಹೋಟೆಲ್ಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಹೊರಬರುವ ಕಸ ಮತ್ತು ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಕೆಲ ಪ್ರದೇಶಗಳಲ್ಲಿ ಕಸದ ರಾಶಿಗಳು ಕೊಳೆಯುತ್ತಿದ್ದು, ದುರ್ವಾಸನೆ ವ್ಯಾಪಿಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.


ವಿದ್ಯಾರ್ಥಿಗಳು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿದಿನ ಈ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕೂಡ ವ್ಯಕ್ತವಾಗಿದೆ.
ಜನರ ಮೇಲೆ ದಂಡ (Penalty) ವಿಧಿಸುವ ಅವಕಾಶ ಇದ್ದರೂ ಈ ಕುರಿತು ಪಂಚಾಯತ್ ಮೌನ ವಹಿಸಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಪಂಚಾಯತ್ ಪ್ರತಿ ಮನೆಯಿಂದ ನಿಯಮಿತವಾಗಿ ಕಸ ಸಂಗ್ರಹಿಸದೇ ಇರುವುದೇ ಈ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ಹಾಗೂ ಒಣ ಕಸವನ್ನು ಜನರು ರಸ್ತೆ ಇಕ್ಕೆಲಗಳಲ್ಲಿ ಎಸೆಯುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ.
ಇನ್ನೊಂದೆಡೆ, ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡಲು ಅಗತ್ಯವಾದ ಸುಸಜ್ಜಿತ ಘನ ತ್ಯಾಜ್ಯ ನಿರ್ವಹಣಾ ಘಟಕವೂ ಸ್ಥಾಪನೆಯಾಗಿಲ್ಲ ಎಂಬ ಟೀಕೆ ವ್ಯಕ್ತವಾಗಿದೆ. ಸಮರ್ಪಕ ವ್ಯವಸ್ಥೆಯ ಕೊರತೆಯಿಂದ ಪರಿಸರ ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಒಂದು ಕಾಲದಲ್ಲಿ ಮಾದರಿಯಾಗಿದ್ದ ಹಾಗೂ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದ್ದ ಘಟಕವೇ ಈಗ ಈ ರೀತಿಯ ದುಸ್ಥಿತಿಗೆ ತಲುಪಿರುವುದು ವಿಪರ್ಯಾಸವೇ ಸರಿ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ಉತ್ತಮ ಹೆಸರನ್ನು ಪಡೆದಿದ್ದ ಪಂಚಾಯತ್ ಈಗ ನಿರ್ಲಕ್ಷ್ಯದ ಆರೋಪಕ್ಕೆ ಗುರಿಯಾಗಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ SBM-G ಅವರು ಕುರ್ನಾಡು ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿರುವುದು ಗಮನಾರ್ಹವಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತಾ ನಿಯಮಗಳನ್ನು ಪಾಲಿಸುವಲ್ಲಿ ಏಕೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ಕೇಳಲಾಗಿದೆ ಎಂದು ತಿಳಿದುಬಂದಿದೆ.
ಗ್ರಾಮ ಪಂಚಾಯತ್ ತಕ್ಷಣ ಕ್ರಮ ಕೈಗೊಂಡು ಕಸ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಬೇಕು, ಪ್ರತಿ ಮನೆಯಿಂದ ನಿಯಮಿತ ಕಸ ಸಂಗ್ರಹಣೆ ಆರಂಭಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿನ ಕಸದ ರಾಶಿಗಳನ್ನು ತೆರವುಗೊಳಿಸಬೇಕು ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ರೂಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

