ಬೆಂಗಳೂರು, ಮೇ. 28 : ಕರ್ನಾಟಕ ರಾಜಕೀಯದಲ್ಲಿ ಮಹತ್ವದ ತಿರುವು ಪಡೆದ ನಾಯಕತ್ವ ಬದಲಾವಣೆ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಡೆಸಿದ ವಿದಾಯ ಉಪಹಾರ ಸಭೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ. “ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಎಲ್ಲರ ಗಮನ ಸೆಳೆದರು.
‘ಕಾವೇರಿ’ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಸಚಿವರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಹೇಳುವುದನ್ನು ಪಾಲಿಸುವುದು ನನ್ನ ಕರ್ತವ್ಯ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಈ ಹಿಂದೆ ನಡೆದಿದ್ದ ಅಧಿಕಾರ ಹಂಚಿಕೆ ಒಪ್ಪಂದದ ಸುಳಿವು ನೀಡುತ್ತಾ, ತಮ್ಮ ರಾಜೀನಾಮೆ ನಿರ್ಧಾರವನ್ನು ಸಚಿವ ಸಂಪುಟ ಸಹೋದ್ಯೋಗಿಗಳ ಮುಂದೆ ಅಧಿಕೃತವಾಗಿ ಪ್ರಕಟಿಸಿದರು.ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸದ ಸಿದ್ದರಾಮಯ್ಯ, “ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಎಲ್ಲಾ ಮುಂದಿನ ಪ್ರಕ್ರಿಯೆಯನ್ನು ಪಕ್ಷದ ನಾಯಕತ್ವವೇ ನಡೆಸಲಿದೆ,” ಎಂದು ಹೇಳಿದರು. ಸಿದ್ದರಾಮಯ್ಯ ಅವರ ಈ ಮಾತುಗಳು ಸಭೆಯಲ್ಲಿ ಭಾವುಕ ವಾತಾವರಣ ಸೃಷ್ಟಿಸಿತು. ಮೂಲಗಳ ಪ್ರಕಾರ, ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರಿಟ್ಟರು ಎನ್ನಲಾಗಿದೆ.ಇದಕ್ಕೂ ಮುನ್ನ ಬೆಳಗ್ಗೆ ‘ಕಾವೇರಿ’ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡು ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಈ ಅಪರೂಪದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉಪಹಾರ ಸಭೆ ಆರಂಭಕ್ಕೂ ಮುನ್ನ ಇಬ್ಬರು ನಾಯಕರು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.