Site icon Ullalavani

ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ವಿರೋಧಿಸಿ ಹೋರಾಟಕ್ಕೆ ಕರೆ

ಮಂಗಳೂರು, ಜೂ. 17: ಕಳೆದ 2001ರಿಂದಲೇ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿದ್ದು, ಆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರ ಪ್ರತಿಭಟನೆ ನಡೆಸಿ ಸರ್ಕಾರದ ಪ್ರಯತ್ನವನ್ನು ವಿಫಲಗೊಳಿಸಿತ್ತು ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಅಂದು ರಾಜ್ಯದಾದ್ಯಂತ ರೈತರು ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಿದ್ದ ಮೀಟರ್‌ಗಳನ್ನು ಕಿತ್ತು ವಿದ್ಯುತ್ ಇಲಾಖೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು ಎಂದು ಅವರು ಸ್ಮರಿಸಿದ್ದಾರೆ.

ಈಗ ರಾಜ್ಯ ಸರ್ಕಾರ ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ವಿದ್ಯುತ್ ಸಂಸ್ಥೆಗಳನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿ ರೈತರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಯೋಜನೆ ರೂಪಿಸಿದೆ ಎಂದು ಆರೋಪಿಸಲಾಗಿದೆ.

ಈ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಗ್ರ ಹೋರಾಟ ನಡೆಯುತ್ತಿದೆ. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಹೋರಾಟ ಇನ್ನಷ್ಟು ಬಲಗೊಳ್ಳಬೇಕಿದ್ದು, ಜಿಲ್ಲೆಯ ರೈತರು ಯೋಜನೆಯನ್ನು ತೀವ್ರವಾಗಿ ಖಂಡಿಸಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಸಂಘದ ಮುಖಂಡರು ಕರೆ ನೀಡಿದ್ದಾರೆ.

ಇದೇ ವೇಳೆ, ಉಭಯ ಜಿಲ್ಲೆಗಳ ಶಾಸಕರು ರಾಜಕೀಯ ಭೇದಭಾವ ಮರೆತು ರೈತರ ಪರವಾಗಿ ನಿಂತು ಈ ಯೋಜನೆಯನ್ನು ತಡೆಯಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶ್ರೀಧರ ಶೆಟ್ಟಿ ಆಗ್ರಹಿಸಿದ್ದಾರೆ.

Exit mobile version