Site icon Ullalavani

ಸಾಮಾಜಿಕ ಜಾಲತಾಣ, ಕರೆಗಳ ಮೂಲಕ ಕಿರುಕುಳಕ್ಕೆ ಬೇಸತ್ತು ಯುವತಿ ಜೊತೆ ತಂದೆ ,ತಾಯಿ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮಹಿಳಾ ಅಯೋಗ ಅದೇಶ

ಟಿ. ನರಸೀಪುರ : ತಾಲೂಕಿನ ಕೆಂಪಯ್ಯನಹುಂಡಿಯಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿ ಹಾಗೂ ಆಕೆಯ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಯುವಕನಿಂದ ನಿರಂತರ ಕಿರುಕುಳ ಮತ್ತು ಮಾನಸಿಕ ಹಿಂಸೆಗೆ ಒಳಗಾಗಿದ್ದ ಯುವತಿ ಹಾಗೂ ಆಕೆಯ ಕುಟುಂಬ ಈ ದುರ್ಘಟನೆಯ ದಾರಿಯನ್ನು ಹಿಡಿದಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಓದಿ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಹಿಳಾ ಅಯೋಗದ ಅಧ್ಯಕರು ಅಕ್ರೋಶ ವ್ಯಕ್ತಪಡಿಸಿ ಈ ಪ್ರಕರಣವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಪ್ರಸ್ತುತ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮೀ ಚೌಧರಿ ಅವರು ದಿನಾಂಕ 22.06.2026 ರಂದು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಇಂತಹ ಸಂದರ್ಭದಲ್ಲಿ ಸಂತ್ರಸ್ತ ಯುವತಿ ಹಾಗೂ ಆಕೆಯ ಕುಟುಂಬ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುವ ಬದಲು ಧೈರ್ಯದಿಂದ ಕಾನೂನು ಸಹಾಯ ಮತ್ತು ಸಮಾಜದ ಬೆಂಬಲವನ್ನು ಪಡೆದು ಸಮಸ್ಯೆಯನ್ನು ಎದುರಿಸಬೇಕಾಗಿತ್ತು. ಆದರೆ ಮರ್ಯಾದೆಗೆ ಅಂಜಿ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ ಇಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ.

ಯಾವುದೇ ವ್ಯಕ್ತಿಗೆ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು, ಖಾಸಗಿ ಚಿತ್ರಗಳು ಅಥವಾ ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧವಾಗಿದೆ. ಇಂತಹ ಕೃತ್ಯಗಳಿಂದ ವ್ಯಕ್ತಿಗಳು ಮತ್ತು ಕುಟುಂಬಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ.

ಆದ್ದರಿಂದ ಈ ಪ್ರಕರಣದ ಸಮಗ್ರ ತನಿಖೆ ನಡೆಸಿ, ಯುವತಿ ಹಾಗೂ ಆಕೆಯ ತಂದೆ-ತಾಯಿಯ ಸಾವಿಗೆ ಕಾರಣಕರ್ತರಾದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಂಡು, ಮೃತರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುತ್ತಿದೆ.

ಈ ಪ್ರಕರಣವು ಸಮಾಜಕ್ಕೆ ಒಂದು ಎಚ್ಚರಿಕೆಯ ಗಂಟೆಯಾಗಿದೆ. ಕಿರುಕುಳ, ಮಾನಸಿಕ ಹಿಂಸೆ ಹಾಗೂ ಸಾಮಾಜಿಕ ಒತ್ತಡಗಳ ವಿರುದ್ಧ ಕಾನೂನು ವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಹೋರಾಡಬೇಕೇ ಹೊರತು, ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುವಂತಹ ನಿರ್ಧಾರಗಳಿಗೆ ಅವಕಾಶ ನೀಡಬಾರದು. ಸಮಾಜ, ಆಡಳಿತ ಮತ್ತು ಕಾನೂನು ವ್ಯವಸ್ಥೆ ಇಂತಹ ಘಟನೆಗಳು ಮರುಕಳಿಸದಂತೆ ಜಾಗೃತಿ ಮತ್ತು ವಿಶ್ವಾಸದ ವಾತಾವರಣ ನಿರ್ಮಿಸಬೇಕಾಗಿದೆ.

Exit mobile version