ಉಳ್ಳಾಲ: ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನೂತನ ಸದಸ್ಯರಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾದ ಆನಂದ ಕೆ. ಅಸೈಗೋಳಿ ಅವರು ನೇಮಕಗೊಂಡಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠವು ನಾರಾಯಣ ಗುರುಗಳ ಸಮಾನತೆ, ಸಾಮಾಜಿಕ ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಕುರಿತ ಅಧ್ಯಯನ, ಸಂಶೋಧನೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ.
ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳ ಸೇವೆ ಸಲ್ಲಿಸಿರುವ ಆನಂದ ಕೆ. ಅಸೈಗೋಳಿ ಅವರು ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿಶಿಷ್ಟ ಗುರುತನ್ನು ಪಡೆದಿದ್ದಾರೆ. ಅವರ ನೇಮಕವು ಶಿಕ್ಷಣ ಕ್ಷೇತ್ರದ ಜೊತೆಗೆ ಸಮಾಜಮುಖಿ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ವಿವಿಧ ಗಣ್ಯರು ಹಾಗೂ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಆತ್ಮೀಯರು, ಶಿಷ್ಯರು, ಸ್ನೇಹಿತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಆನಂದ ಕೆ. ಅಸೈಗೋಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ನೂತನ ಜವಾಬ್ದಾರಿಯಲ್ಲಿ ಯಶಸ್ಸು ಹಾಗೂ ಇನ್ನಷ್ಟು ಜನಪರ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.