ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯನ್ನು ನೀಡಿದೆ. ಒಟ್ಟು 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸುವಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯ ಬಜೆಟ್‌ನಲ್ಲಿ ಆರಂಭದಲ್ಲಿ 56,942 ಹುದ್ದೆಗಳ ನೇಮಕಾತಿ ಘೋಷಿಸಲಾಗಿತ್ತು. ಬಳಿಕ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಈಗಾಗಲೇ ಸುಮಾರು 24 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ. ಈ ನಡುವೆ ಸರ್ಕಾರವು ನೇಮಕಾತಿಯ ವ್ಯಾಪ್ತಿಯನ್ನು ವಿಸ್ತರಿಸಿ ಒಟ್ಟು 72 ಸಾವಿರ ಹುದ್ದೆಗಳ ಭರ್ತಿಗೆ ತೀರ್ಮಾನಿಸಿದೆ ಎಂದು ಅವರು ಹೇಳಿದರು.
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಗಳನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿದೆ. ಶಿಕ್ಷಕರು, ವೈದ್ಯರು, ಪಶುವೈದ್ಯರು, ಎಂಜಿನಿಯರ್‌ಗಳು ಸೇರಿದಂತೆ ವಿವಿಧ ಇಲಾಖೆಗಳ ತುರ್ತು ಅಗತ್ಯವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನೇಮಕಾತಿ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಗಳಾದ ಉಮಾ ಮಹದೇವನ್ ಹಾಗೂ ಗೃಹ ಕಾರ್ಯದರ್ಶಿಯನ್ನು ನೇಮಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಗತ್ಯ ಚರ್ಚೆ ನಡೆಸಿ ಅಂತಿಮ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆಗಳು ಪ್ರಕಟವಾಗುವ ನಿರೀಕ್ಷೆಯಿದೆ