ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ಅವರು ನೇಮಕಗೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿದ್ದ ಹಿರಿಯ ಪ್ರಾಧ್ಯಾಪಕ ಪ್ರೊ.ನಾಗಪ್ಪ ಗೌಡ ಅವರು ಮಂಗಳವಾರ ಸೇವೆಯಿಂದ ನಿವೃತ್ತಿ ಹೊಂದಿದ್ದು, ಇವರ ಸ್ಥಾನಕ್ಕೆ ಮಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ.ಧನಂಜಯ ಕುಂಬ್ಳೆ ಅವರನ್ನು ವಿವಿಯು ನೇಮಕಗೊಳಿಸಿ ಆದೇಶ ನೀಡಿತ್ತು.
ಮಂಗಳವಾರದಂದು ಪ್ರೊ.ನಾಗಪ್ಪ ಗೌಡ ಅವರು ವಿಭಾಗದ ದಾಖಲೆ ಪತ್ರಗಳನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಎಸ್‌ಎಸ್‌ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿರುವ ಇವರು, ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕನಕದಾಸ ಅಧ್ಯಯನ ಕೇಂದ್ರ, ತುಳು ಅಧ್ಯಯನ ಪೀಠ, ಎನ್ ಜಿ ಪಾವಂಜೆ ಅಧ್ಯಯನ ಪೀಠ, ರಾಣಿ ಅಬ್ಬಕ್ಕ ಅಧ್ಯಯನ ಪೀಠಗಳ ಸಂಯೋಜಕರಾಗಿ ಹಾಗೂ ಪ್ರಸಾರಾಂಗದ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿದ್ದಾರೆ.

