Site icon Ullalavani

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಗೆ ಭಾಗಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಜೊತೆಗೆ, ಮಳೆಯೊಂದಿಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮುಂಗಾರು ಮಳೆಯ ಅಬ್ಬರ ಜೋರಾಗುವ ಹಿನ್ನೆಲೆ ಕಡಲ ತೀರದ ನಿವಾಸಿಗಳು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.ಕರಾವಳಿ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.ಇನ್ನು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ 30-40 ಕಿಮೀ ವೇಗದಲ್ಲಿ ನಿರಂತರ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Exit mobile version