ಬೆಂಗಳೂರು, ಜು. 15 : ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲೂ 32ಕ್ಕೂ ಹೆಚ್ಚು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಜೂನ್ ತಿಂಗಳಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಆದರೆ ಜುಲೈ ತಿಂಗಳ ಕೇವಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.”ಆಂಧ್ರಪ್ರದೇಶದ ಕಡಪಾದಲ್ಲಿ ಸಂಭವಿಸಿರುವ ಸಾವುಗಳು ಸದ್ಯಕ್ಕೆ ಶಂಕಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸದ್ಯ ಪತ್ತೆಯಾಗಿರುವ ಪ್ರಕರಣಗಳು ಅಷ್ಟೊಂದು ಗಂಭೀರ ಸ್ವರೂಪದ್ದಲ್ಲ. ಶಸ್ತ್ರಚಿಕಿತ್ಸೆಗೆ ಮುನ್ನ ನಡೆಸಲಾಗುವ ಕಡ್ಡಾಯ ತಪಾಸಣೆಯ ಸಂದರ್ಭದಲ್ಲಿ ಯಾವುದೇ ರೋಗಲಕ್ಷಣಗಳಿಲ್ಲದ ಈ ಸೋಂಕು ಪತ್ತೆಯಾಗುತ್ತಿದೆ. ಆರೋಗ್ಯ ಇಲಾಖೆಯು ಪ್ರತಿದಿನದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಯಾರೂ ಅನಗತ್ಯವಾಗಿ ಆತಂಕ ಪಡುವ ಅಗತ್ಯವಿಲ್ಲ” ಎಂದು ಆರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್ ಹೆಗಡೆ ತಿಳಿಸಿದ್ದಾರೆ.

