Site icon Ullalavani

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ : ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು – ಪರಮೇಶ್ವರ್‌

ಚಿಕ್ಕಬಳ್ಳಾಪುರ, ಜು. 22 : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ʼನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ ಅರಿವಿಲ್ಲವೇ? ಇದನ್ನು ಪ್ರಶ್ನಿಸುವುದು ನಮ್ಮ ಹಕ್ಕು ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ.


ನಿನ್ನೆ ನವದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಶ್ನಿಸುವವರನ್ನೇ ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.ಮೊದಲು CET ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ನಡೆಸುತ್ತಿತ್ತು. ಆ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಯುತ್ತಿತ್ತು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗಲೂ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ ಕೇಂದ್ರ ಸರ್ಕಾರ CET ಬದಲಿಗೆ ನೀಟ್ ಪರೀಕ್ಷೆಯನ್ನು ಕೈಗೆತ್ತಿಕೊಂಡಿತು. ಅನೇಕರು ವಿರೋಧಿಸಿದರು, ವಿದ್ಯಾರ್ಥಿಗಳು ಒಪ್ಪಿಕೊಂಡರು. ಆದರೆ ಈಗ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗುತ್ತಿದೆ ಎಂದರು.ದೇಶದ ಯುವಕರ ಭವಿಷ್ಯ ಮುಖ್ಯ. ಅವರಿಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗ ನೀಡುವುದು ನಮ್ಮ ಜವಾಬ್ದಾರಿ. ಯುವಕರೇ ದೇಶ ಕಟ್ಟುವವರು. ಅವರ ಜೀವನ ರೂಪಿಸಬೇಕಿದೆ ಎಂದು ಹೇಳಿದರು.

Exit mobile version