ಮಂಗಳೂರು, ಜು. 27 : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ ಬಳಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಈ ಬಸ್, ಸೂರಲ್ಪಾಡಿ ಬಳಿ ಏಕಾಏಕಿ ಎಡಭಾಗಕ್ಕೆ ತಿರುಗಿದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಬಲಭಾಗಕ್ಕೆ ತಿರುಗಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ಒಬ್ಬರು ಅಥವಾ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.







