ಬೆಂಗಳೂರು, ಆಗಸ್ಟ್ 4: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದೆ. ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದು ಅದು ಹುಸಿಯಾದ ಬೆನ್ನಲ್ಲೇ ಹಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಕೆಲವರು ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಶಾಸಕರ ಬೆಂಬಲಿಗರು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ್, ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕರು ಹಾಗೂ ಪಕ್ಷದ ನಿಷ್ಠಾವಂತರಿಗೆ ಇದು ಕಾಲವಲ್ಲ ಎಂದು ಅಸಮಾಧಾನ ಹೊರಹಾಕಿರುವ ಅವರು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ.
ಇನ್ನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ತಮಗೆ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಆರೋಪಿಸಿರುವ ಅವರು, ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.
ನಾರಾಯಣಸ್ವಾಮಿ, ನಂಜೇಗೌಡ, ಸಂಗಮೇಶ್ ಅಸಮಾಧಾನ
ಕೋಲಾರದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಬೆಂಬಲಿಗ ಹರೀಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನ ತಪ್ಪಿಸಿದ್ದಕ್ಕೆ ಕೆ.ಎಚ್. ಮುನಿಯಪ್ಪ ಅವರ ವಿರುದ್ಧವೂ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಲೂರು ಶಾಸಕ ಕೆ.ವೈ. ನಂಜೇಗೌಡ ಕೂಡ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕೂಡ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಬೆಂಬಲಿಗರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಬಿಜೆಪಿ ಕಡೆಯಿಂದ ಆಮಿಷ ಬಂದಿದ್ದರೂ ತಾನು ಪಕ್ಷ ತೊರೆದಿಲ್ಲ ಎಂದು ಹೇಳಿರುವ ಅವರು, ಕ್ಷೇತ್ರದ ಜನರು ರಾಜೀನಾಮೆ ನೀಡುವಂತೆ ಒತ್ತಾಯಿಸಿದರೆ ಆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಹಿರಿಯ ಶಾಸಕ ಡಿ.ಜಿ. ಶಾಂತನಗೌಡ ಕೂಡ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಅಸಮಾಧಾನಗೊಂಡಿದ್ದಾರೆ. ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ಮಹದೇವಪ್ಪ ಬೆಂಬಲಿಗರಿಂದಲೂ ಒತ್ತಡ
ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದು ಅವರ ಬೆಂಬಲಿಗರಲ್ಲೂ ಅಸಮಾಧಾನ ಮೂಡಿಸಿದೆ. ಮಹದೇವಪ್ಪ ಅವರ ಪುತ್ರ ಹಾಗೂ ಸಂಸದ ಸುನಿಲ್ ಬೋಸ್ ಅವರಿಗೆ ರಾಜೀನಾಮೆ ನೀಡುವಂತೆ ಬೆಂಬಲಿಗರು ಹಾಗೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ಬಹಿರಂಗವಾಗಿದೆ.
ಭಾವೋದ್ವೇಗದಿಂದ ನಿರ್ಧಾರ ಕೈಗೊಳ್ಳಬೇಡಿ: ಹರಿಪ್ರಸಾದ್ ಮನವಿ
ಈ ನಡುವೆ, ಸಚಿವ ಸ್ಥಾನ ಸಿಗದಿರುವುದಕ್ಕೆ ಶಾಸಕರು ಭಾವೋದ್ವೇಗದಿಂದ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮನವಿ ಮಾಡಿದ್ದಾರೆ. ಅಸಮಾಧಾನಗೊಂಡಿರುವ ಶಾಸಕರೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಅವರ ನೋವು ಮತ್ತು ಅಭಿಪ್ರಾಯಗಳನ್ನು ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ ತನ್ವೀರ್ ಸೇಠ್ ಬೆಂಬಲಿಗರ ಪ್ರತಿಭಟನೆ
ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ಮೈಸೂರಿನಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಟೌನ್ಹಾಲ್ ಸುತ್ತಮುತ್ತಲೂ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನೆ ವೇಳೆ ತನ್ವೀರ್ ಸೇಠ್ ಅವರ ಬೆಂಬಲಿಗ ತಬ್ರೇಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಲ್ಲೂ ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರಿಂದ ಪ್ರತಿಭಟನೆಗಳು ನಡೆದಿವೆ. ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರ ಬೆಂಬಲಿಗರು ಇಬ್ಬರಿಗೂ ಸಚಿವ ಸ್ಥಾನ ಸಿಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಬಾವಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಬೆಂಬಲಿಗರು, ಟೋಲ್ಗೇಟ್ ಸರ್ಕಲ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಫೋಟೋ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲೂ ಶಾಸಕ ಅಶೋಕ ಪಟ್ಟಣ ಅವರಿಗೆ ಸಚಿವ ಸ್ಥಾನ ಸಿಗದಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶಾಸಕ ನಾಡಗೌಡ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಮುಧೋಳದಲ್ಲಿ ಶಾಸಕ ಆರ್.ಬಿ. ತಿಮ್ಮಾಪುರ ಅವರ ಬೆಂಬಲಿಗರು ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲೂ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಬಾಗೇಪಲ್ಲಿಯಲ್ಲಿ ಮೂರು ತಾಲೂಕು ಬಂದ್ಗೆ ಕರೆ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿವಿಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಟೈರ್ಗೆ ಬೆಂಕಿ ಹಚ್ಚಿರುವ ಬೆಂಬಲಿಗರು, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬಂದ್ ನಡೆಸಲು ನಿರ್ಧರಿಸಿದ್ದಾರೆ.
ಹೀಗೆ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನದ ಸರಣಿ ಮುಂದುವರಿದಿದ್ದು, ಹಲವು ಶಾಸಕರು ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಬೆಂಬಲಿಗರ ಪ್ರತಿಭಟನೆ, ರಾಜೀನಾಮೆ ಎಚ್ಚರಿಕೆ ಹಾಗೂ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ಪಕ್ಷದ ನಾಯಕತ್ವಕ್ಕೆ ಹೊಸ ಸವಾಲು ತಂದಿವೆ. ಈ ಅಸಮಾಧಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹೇಗೆ ಶಮನಗೊಳಿಸಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

