Site icon Ullalavani

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಿ ಅಭಿನಂದಿಸಿದ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ

ಮಂಜೇಶ್ವರ, ಆ.4: ವರ್ಕಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್‌ಟು ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಗೌರವಾಭಿನಂದನೆ ಕಾರ್ಯಕ್ರಮವು ಕೊಡ್ಲಮೊಗರುವಿನ ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಳೆದ ಎಸ್‌ಎಸ್‌ಎಲ್‌ಸಿ ಹಾಗೂ ಪ್ಲಸ್‌ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಚಿನ್ನದ ಪದಕ ವಿತರಿಸಿ ಅಭಿನಂದಿಸಿದರು.

ಕಾರ್ಯಕ್ರಮವನ್ನು ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿ, ವಿದ್ಯಾರ್ಥಿಗಳು ತಮ್ಮೊಳಗಿನ ಪ್ರತಿಭೆಯನ್ನು ಗುರುತಿಸಿ, ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಶ್ರಮಿಸಿದರೆ ಯಶಸ್ಸು ಖಚಿತ ಎಂದು ತಿಳಿಸಿದರು.

ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಎಲ್ಲಾ ವಿಷಯಗಳಲ್ಲಿ ಎ ಪ್ಲಸ್‌ (A+) ಪಡೆದ ಹೈಸ್ಕೂಲು ಹಾಗೂ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಸ್ವಾಗತಿಸಿದರು. ವರ್ಕಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಬಿ.ಎ. ವಂದಿಸಿದರು.

ಕಾರ್ಯಕ್ರಮದಲ್ಲಿ ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಮರ್ ಬೋರ್ಕಳ, ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ, ವರ್ಕಾಡಿ, ಮೀಂಜ ಹಾಗೂ ಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯರು, ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ವಿಜಯಕುಮಾರ್ ಹಾಗೂ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ. ಉಪಸ್ಥಿತರಿದ್ದರು.

ಕಿಶೋರ್ ಕುಮಾರ್ ಹಾಗೂ ವನಿತಾ ಆರ್. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version