ಉಳ್ಳಾಲ: ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ. ಮೊದಲ ಆರು ತಿಂಗಳು ಮಗುವಿಗೆ ತಾಯಿಯ ಎದೆಹಾಲು ನೀಡುವುದರಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರೋಟರಿ ಡೌನ್‌ಟೌನ್ ಕ್ಲಬ್ ಮಂಗಳೂರು ಅಧ್ಯಕ್ಷ ಉಮೇಶ್ ಗಟ್ಟಿ ಹೇಳಿದರು.
ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಸ್ಟಿಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೆಕಾರ್, ಉಚ್ಚಿಲ ಬೋವಿ ವಿದ್ಯಾ ಸಂಸ್ಥೆಗಳು ಉಚ್ಚಿಲ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉಚ್ಚಿಲ ಬೋವಿ ವಿದ್ಯಾ ಸಂಸ್ಥೆಗಳ ವಜ್ರಮಹೋತ್ಸವ ಸ್ಮಾರಕ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಮಾಜದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಪಡೆಯಲು ಇಂತಹ ಶಿಬಿರಗಳು ಉತ್ತಮ ಅವಕಾಶ ಕಲ್ಪಿಸುತ್ತವೆ. ವಿಶೇಷವಾಗಿ ಕಣ್ಣಿನ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ.
ಆರೋಗ್ಯ ಇಲಾಖೆ, ಜಿಲ್ಲಾಡಳಿತ, ವೈದ್ಯಕೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಇಂತಹ ಸೇವಾ ಕಾರ್ಯಕ್ರಮಗಳ ಪ್ರಯೋಜನ ಹೆಚ್ಚಿನ ಜನರಿಗೆ ತಲುಪಲಿದೆ. “ಆರೋಗ್ಯವಂತ ತಾಯಿ, ಆರೋಗ್ಯವಂತ ಮಗು ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆರೋಗ್ಯ ಜಾಗೃತಿ ಅತ್ಯಗತ್ಯ” ಎಂದು ಅವರು ಹೇಳಿದರು.
ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಾ. ವಿಜಯಲಕ್ಷ್ಮೀ ಮಕ್ಕಳ ಆರೋಗ್ಯ ಕಾಪಾಡುವ ಬಗ್ಗೆ ಮಾಹಿತಿ ನೀಡಿದರು. ಕೌನ್ಸಿಲರ್ ಸಲಾಮ್ ಯು. ಆರೋಗ್ಯ ಶಿಬಿರದ ಅಗತ್ಯತೆ ಬಗ್ಗೆ ವಿವರಿಸಿದರು.ಡಾ. ಜಯಶ್ರೀ ಉಚ್ಚಿಲ, ಕಣ್ಣಿನ ತಜ್ಞ ಡಾ. ತನ್ವೀ, ಡಾ. ಸೀಮಾ, ಡಾ. ವಿದ್ಯಾಲಕ್ಷ್ಮೀ, ಡಾ. ಪ್ರಾಂಜಲಿ, ರೋಟರಿ ಡೌನ್ ಟೌನ್ ಕ್ಲಬ್ ಮಂಗಳೂರು ಕಾರ್ಯದರ್ಶಿ ಪವಿತ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.ಬೋವಿ ಶಾಲಾ ಸಂಚಾಲಕ ಕರುಣಾಕರ ಉಚ್ಚಿಲ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಸವಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕ ಮೋಹನ್ ದಾಸ್ ರೈ ಕಾರ್ಯಕ್ರಮ ನಿರೂಪಿಸಿದರು.