Site icon Ullalavani

ವಾಲ್ಮೀಕಿ ಹಗರಣ: ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ತೊಕ್ಕೊಟ್ಟಿನಲ್ಲಿ ಬಿಜೆಪಿ ಮಂಗಳೂರು ಮಂಡಲ ಪ್ರತಿಭಟನೆ

ಉಳ್ಳಾಲ, ಆ.19: ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವವರ ಮತ್ತಷ್ಟು ಹೆಸರುಗಳು ಬಹಿರಂಗಗೊಳ್ಳುವ ಆತಂಕದಿಂದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಳಿಸಲಾಗಿದೆ ಎಂದು ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್. ಆರೋಪಿಸಿದರು.

ವಾಲ್ಮೀಕಿ ನಿಗಮದ ಹಗರಣದ ರೂವಾರಿಯಾಗಿರುವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಮಂಗಳೂರು ಮಂಡಲ ವತಿಯಿಂದ ಬುಧವಾರ ತೊಕ್ಕೊಟ್ಟು ಫ್ಲೈಓವರ್ ಕೆಳಗಡೆ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು. ಸಚಿವ ಸ್ಥಾನದಲ್ಲಿದ್ದ ಸಂದರ್ಭ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣದಲ್ಲಿ ಆರೋಪ ಎದುರಿಸಿ ಜೈಲು ಸೇರಿದ್ದ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಾಂಗ್ರೆಸ್ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಭರವಸೆ ನೀಡಿ ಜನರಿಂದ ಮತ ಪಡೆದಿತ್ತು. ಆದರೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನೇ ಮತ್ತೆ ಸಚಿವರನ್ನಾಗಿ ಮಾಡುವ ಮೂಲಕ ಸರ್ಕಾರದ ನಿಲುವಿನ ಬಗ್ಗೆ ಅನುಮಾನ ಮೂಡಿದೆ ಎಂದು ಮೋಹನ್ ರಾಜ್ ಹೇಳಿದರು.

ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಮಾತನಾಡಿ, ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರು ಭಾಗಿಯಾಗಿರುವ ಆರೋಪವಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಜೈಲು ಸೇರಿದ್ದ ಅವರು ಇದೀಗ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಉಳ್ಳಾಲ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ತಂದೆ-ಮಗನ ಆಡಳಿತವಿದ್ದರೂ ನಿರೀಕ್ಷಿತ ಮಟ್ಟದ ಅಭಿವೃದ್ಧಿಯಾಗಿಲ್ಲ. ಹಲವು ವರ್ಷಗಳಿಂದ ಕಡಲ್ಕೊರೆತ ಸಮಸ್ಯೆ ಮುಂದುವರಿದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ ಮಾತನಾಡಿ, ರಾಜ್ಯ ಸರ್ಕಾರದ ಹಲವು ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ವಾಲ್ಮೀಕಿ ಹಗರಣದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಕೂಪವಾಗಿದೆ ಎಂದು ಆರೋಪಿಸಿದರು. ದೇಶಭಕ್ತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧವೂ ಅವರು ವಾಗ್ದಾಳಿ ನಡೆಸಿದರು.

ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ಮಾತನಾಡಿ, ತಾಲೂಕು ಕಚೇರಿಯಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆಯಿಲ್ಲ. ರಸ್ತೆಗಳಲ್ಲಿ ಹೊಂಡಗಳು ಬಿದ್ದಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಸ್ಥಳೀಯ ಮೂಲಸೌಕರ್ಯ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪರಿಹಾರ ನೀಡುವುದರಲ್ಲೂ ಪಕ್ಷಪಾತವೇಕೆ?

ಇತ್ತೀಚೆಗೆ ವಿದ್ಯುತ್ ಆಘಾತದಿಂದ ಮೃತಪಟ್ಟ ಮೆಸ್ಕಾಂ ಲೈನ್‌ಮ್ಯಾನ್ ಕುಟುಂಬಕ್ಕೆ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಪರಿಹಾರದ ಆದೇಶ ಪತ್ರ ನೀಡಿರುವುದನ್ನೂ ಮೋಹನ್ ರಾಜ್ ಪ್ರಶ್ನಿಸಿದರು. ವಿಮಾ ಕಂಪನಿಯಿಂದ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇದರ ನಡುವೆ ಸಚಿವರು ರಾಜಕೀಯ ನಾಟಕ ಮಾಡುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು.

ಮಾನವೀಯತೆ ಇದ್ದರೆ ಲೈನ್‌ಮ್ಯಾನ್ ಕುಟುಂಬಕ್ಕೆ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವ ಕೆಲಸ ಮಾಡಬೇಕಿತ್ತು ಎಂದರು. ಕಳೆದ ವರ್ಷ ಮಂಜನಾಡಿಯಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡು, ಎರಡೂ ಕಾಲುಗಳನ್ನು ಕಳೆದುಕೊಂಡು ಅಂಗವಿಕಲರಾದ ಅಶ್ವಿನಿ ಅವರಿಗೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನೆರವು ನೀಡಿತ್ತು. ಪರಿಹಾರ ನೀಡುವ ವಿಚಾರದಲ್ಲೂ ಪಕ್ಷಪಾತ ಮಾಡುವುದು ಸರಿಯೇ ಎಂದು ಅವರು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ವಕ್ತಾರ ಜೀವನ್ ಕುಮಾರ್ ತೊಕ್ಕೊಟ್ಟು, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಹೇಮಂತ್ ಶೆಟ್ಟಿ, ಕೋಟೆಕಾರು ಪ.ಪಂ. ಅಧ್ಯಕ್ಷೆ ದಿವ್ಯಾ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಸುಮನಾ ಹರೀಶ್ ಶೆಟ್ಟಿ, ಮನೋಜ್ ಆಚಾರ್ಯ, ಶೈಲೇಶ್ ಶೆಟ್ಟಿ ತಲಪಾಡಿ, ಕಾರ್ಯದರ್ಶಿಗಳಾದ ರಮೇಶ್ ಬೆದ್ರೋಳಿಕೆ, ಭರತ್ ರಾಜ್ ಗಟ್ಟಿ, ಕಿಶೋರ್ ಕುತ್ತಾರು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ನಿಶಾನ್ ಪೂಜಾರಿ, ಮಂಡಲ ಅಧ್ಯಕ್ಷ ಮುರಳಿ ಕೊಣಾಜೆ, ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಮಾಧವಿ ಉಳ್ಳಾಲ್, ಪ್ರಧಾನ ಕಾರ್ಯದರ್ಶಿ ಸ್ವಪ್ನ ಶೆಟ್ಟಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಪುರುಷೋತ್ತಮ ಗಟ್ಟಿ ಪರ್ಯತ್ತೂರು, ಅಶೋಕ್ ಕೆಂಜಿಲ, ನಿತ್ಯಾನಂದ ಭಂಡಾರಿ, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಸುಜಾತ ಶೆಟ್ಟಿ, ಜಿತೇಂದ್ರ ಶೆಟ್ಟಿ, ಹರಿಯಪ್ಪ ಸಾಲ್ಯಾನ್, ಅತುಲ್ ಬಗಂಬಿಲ, ಸಿದ್ಧೀಕ್ ತಲಪಾಡಿ, ಸಿರಾಜ್ ಮುಡಿಪು, ಪದ್ಮನಾಭ ಗಟ್ಟಿ, ದೀಕ್ಷಿತ್ ಉಳ್ಳಾಲಬೈಲ್, ಶರಣ್ ಶೆಟ್ಟಿ, ಆನಂದ ಶೆಟ್ಟಿ, ಗಣೇಶ್ ಭಂಡಾರಿ ನಡಾರ್ ಮತ್ತಿತರರು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು ಸ್ವಾಗತಿಸಿದರು. ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ ವಂದಿಸಿದರು.

Exit mobile version