Site icon Ullalavani

ಉಡುಪಿ: ಆಗುಂಬೆ ಘಾಟ್, ಹೆಬ್ರಿ ರಸ್ತೆ ಅಭಿವೃದ್ಧಿಗೆ 42.75 ಕೋಟಿ ರೂ. ಅನುದಾನ ಬಿಡುಗಡೆ

ಉಡುಪಿ : ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎಯ ಆಯ್ದ ರಸ್ತೆ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳಿಗೆ 42.75 ಕೋಟಿ ರೂ. ಅನುದಾನವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಡುಗಡೆ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬಿಡುಗಡೆಯಾದ ಅನುದಾನವನ್ನು ಆಗುಂಬೆಯಿಂದ ಹೆಬ್ರಿ ಪಟ್ಟಣದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುವುದು. ಆಗುಂಬೆ ಘಾಟ್‌ನ ಆಯ್ದ ಸ್ಥಳಗಳಲ್ಲಿ ಕಾಂಕ್ರೀಟ್ ತಡೆಗೋಡೆಗಳ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಇದರ ಜತೆಗೆ ಪರ್ಕಳದಿಂದ ಕರಾವಳಿ ಜಂಕ್ಷನ್‌ವರೆಗಿನ ಆಯ್ದ ರಸ್ತೆ ಭಾಗಗಳ ಅಭಿವೃದ್ಧಿಗೂ ಅನುದಾನವನ್ನು ಬಳಸಿಕೊಳ್ಳಲಾಗುವುದು.ಈ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಅನುದಾನ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version