ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಹಂಚಿಕೆಯಾಗಬೇಕಿರುವ ಡಿ.ಸಿ. ಮನ್ನಾ ಭೂಮಿ ವಿಚಾರದಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಭೀಮ್ ಸೇನೆ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಚಿವ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಘಟನೆಗಳ ಮುಖಂಡರು, ಡಿ.ಸಿ. ಮನ್ನಾ ಭೂಮಿ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸರ್ಕಾರದಿಂದ ನಿರೀಕ್ಷಿತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದರು.
ದಲಿತ ಸಂಘಟನೆಗಳ ನಿಯೋಗವು ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಡಿ.ಸಿ. ಮನ್ನಾ ಭೂಮಿ ಒತ್ತುವರಿ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ದಲಿತರಿಗೆ ಮೀಸಲಾಗಿದ್ದ ಅಥವಾ ಹಂಚಿಕೆಯಾಗಬೇಕಿದ್ದ ಡಿ.ಸಿ. ಮನ್ನಾ ಭೂಮಿ ಪ್ರಭಾವಿ ವ್ಯಕ್ತಿಗಳು ಹಾಗೂ ವಿವಿಧ ಸಂಸ್ಥೆಗಳ ವಶದಲ್ಲಿದೆ ಎಂದು ಸಂಘಟನೆಗಳು ಆರೋಪಿಸಿವೆ.
ಇಂತಹ ಭೂಮಿಯನ್ನು ಗುರುತಿಸಿ ಸರ್ಕಾರ ವಶಕ್ಕೆ ಪಡೆದು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಲಾಗಿದೆ. ವರ್ಷಗಳಿಂದ ಭೂಮಿಗಾಗಿ ಕಾಯುತ್ತಿರುವ ಭೂಹೀನ ದಲಿತ ಕುಟುಂಬಗಳ ಸಮಸ್ಯೆಯನ್ನು ಸರ್ಕಾರ ಆದ್ಯತೆಯ ಮೇರೆಗೆ ಪರಿಹರಿಸಬೇಕು. ಲಭ್ಯವಿರುವ ಸರ್ಕಾರಿ ಭೂಮಿ, ಒತ್ತುವರಿಯಾಗಿರುವ ಭೂಮಿ ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

