ಉಳ್ಳಾಲ: ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಮಾಡೂರು ಮರಿಯಣ್ಣ ಪಾಲಿನ ಶ್ರೀ ಶಿವ ದುರ್ಗಾಂಬಾ ಕ್ಷೇತ್ರದಲ್ಲಿ ಅ.15ರಿಂದ 19ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಯತಿವರ್ಯರಾದ ಶಿವಯೋಗಿ ಶ್ರೀ ದುರ್ಗಾನಂದ ಸ್ವಾಮೀಜಿ ತಿಳಿಸಿದರು.

ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್ನಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.15ರಿಂದ 17ರವರೆಗೆ ನವರಾತ್ರಿ ಪೂಜೆ ಹಾಗೂ ನವದುರ್ಗಾ ಪೂಜೆ ನಡೆಯಲಿದೆ. ಅ.18ರಂದು ಶ್ರೀ ದೇವಿಯ ವಿಶೇಷ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಗಣಹೋಮ,ಸತ್ಯನಾರಾಯಣ ಪೂಜೆ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಅ.19ರಂದು ಗಣ್ಯರ ಉಪಸ್ಥಿತಿಯಲ್ಲಿ ವಿಶೇಷ ಧಾರ್ಮಿಕ ಸಭೆ ನಡೆಯಲಿದ್ದು,ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಗಣ್ಯರು ಭಾಗವಹಿಸಿ ಆಶೀರ್ವಚನ ಹಾಗೂ ಸಂದೇಶ ನೀಡಲಿದ್ದಾರೆ.ಇದೇ ದಿನ ಗಣಹೋಮ,ರುದ್ರಾಭಿಷೇಕ,ರುದ್ರಪಾರಾಯಣ,ಮಹಾ ಚಂಡಿಕಾಯಾಗ,ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಅಖಂಡ ಭಜನೋತ್ಸವ ಹಾಗೂ ದುರ್ಗಾ ನಮಸ್ಕಾರ ಪೂಜೆ ಜರುಗಲಿದ್ದು,ವಿವಿಧ ಭಜನಾ ತಂಡಗಳು ಭಾಗವಹಿಸಲಿವೆ. ನವರಾತ್ರಿ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದುರ್ಗಾಂಬಾ ದೇವಿಯ ಕೃಪೆಗೆ ಪಾತ್ರರಾಗಬೇಕು. ಕ್ಷೇತ್ರದ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಭಕ್ತರು ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ್ ಉಚ್ಚಿಲ್ ಮಾತನಾಡಿ, ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಮಾಜಮುಖಿ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಭಕ್ತರಲ್ಲಿ ಧಾರ್ಮಿಕ ಜಾಗೃತಿ, ಸೇವಾ ಮನೋಭಾವ ಹಾಗೂ ಸೌಹಾರ್ಧತೆಯನ್ನು ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಹಿಳೆಯರು, ಯುವಕರು ಹಾಗೂ ಸಾರ್ವಜನಿಕರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಯಶವಂತ ಆಳ್ವ, ಟ್ರಸ್ಟಿ ಜನಾರ್ಧನ್ ಬಳ್ಳಾಲ್,ಸಲಹೆಗಾರ ಯೋಗೀಶ್ ಶೆಟ್ಟಿ ಜಪ್ಪು,ಮಹಿಳಾ ಸಮಿತಿ ಅಧ್ಯಕ್ಷೆ ಅಮಿತಾ ಅಶ್ವಿನ್ ಬಂಡಿಕೊಟ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಬಬಿತಾ ಉಳ್ಳಾಲ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

