ಮಂಗಳೂರು, ಅ.10: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ಗುಂಪು ಸೇರಿ ಸವಾರರಿಗೆ ತೊಂದರೆ ನೀಡುವುದನ್ನು ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಹೆಚ್.ವಿ. ಅವರು ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ (ತೃತೀಯಲಿಂಗಿಗಳ) ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯಲಿಂಗಿಗಳು ನಿಂತು ಪ್ರಯಾಣಿಕರನ್ನು ತೊಂದರೆಗೊಳಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಕುರಿತು ಪ್ರಥಮ ಹಂತದಲ್ಲಿ ಜಾಗೃತಿ ಮೂಡಿಸಿ ಹೆದ್ದಾರಿಗಳಲ್ಲಿ ನಿಲ್ಲದಂತೆ ಎಚ್ಚರಿಕೆ ನೀಡಬೇಕು. ಸಮಸ್ಯೆ ಮುಂದುವರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸರಿಗೆ ನಿರ್ದೇಶನ ನೀಡಿದರು.
ಮಂಗಳೂರಿನಲ್ಲಿ ಅಕ್ಕಪಕ್ಕದ ರಾಜ್ಯಗಳಿಂದ ಬರುವ ವ್ಯಕ್ತಿಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ತೃತೀಯಲಿಂಗಿ ಸಂಘಟನೆಗಳ ಪ್ರತಿನಿಧಿಗಳು ಗಮನ ಸೆಳೆದಿದ್ದು, ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ವಸತಿ ರಹಿತ 15 ತೃತೀಯಲಿಂಗಿಗಳಿಗೆ ನಿವೇಶನ ಹಂಚಿಕೆ ಮಾಡಲು ಅನುವಾಗುವಂತೆ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಪಟ್ಟಿಯನ್ನು ಸಲ್ಲಿಸಲಾಗಿದೆ. ಇದರ ಜೊತೆಗೆ, ತೃತೀಯಲಿಂಗಿ ಸಮುದಾಯದಲ್ಲಿ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಆರ್ಥಿಕ ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಇತ್ತೀಚಿನ ಸಮೀಕ್ಷೆಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 96 ತೃತೀಯಲಿಂಗಿಗಳು ನೋಂದಾಯಿಸಿಕೊಂಡಿದ್ದಾರೆ. ಅರ್ಹ ವ್ಯಕ್ತಿಗಳು ಸರ್ಕಾರದ ಪುನರ್ವಸತಿ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.ಈ ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ನರ್ವಾಡೆ ವಿನಾಯಕ್ ಕರ್ಬಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ತೃತೀಯಲಿಂಗಿ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.