ಕಾರ್ಕಳ, ಅ.13 : ಕಾರ್ಕಳದ ಯೂತ್ ಕಾಂಗ್ರೆಸ್ ನಾಯಕ ಇನ್ನಾ ಯೋಗೇಶ್ ಆಚಾರ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಚಾರ ಗ್ರಾಮದ ವ್ಯಕ್ತಿಯೊಬ್ಬನನ್ನು ಹೆಬ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೃಷ್ಣ ನಾಯಕ್ ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧನದ ಬೆನ್ನಲ್ಲೇ, ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕೃಷ್ಣ ನಾಯಕ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.ಚಾರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ಕೃಷ್ಣ ನಾಯಕ್, ಈ ಹಿಂದೆ ಕೂಡ ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ಹೊಂದಿದ್ದಾರೆ.”ಕಾಂಗ್ರೆಸ್ಸಿಗರು ಮುಸ್ಲಿಮರಿಗೆ ಹುಟ್ಟಿದವರು” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರತ್ಯೇಕ ಪ್ರಕರಣ ಕೂಡ ದಾಖಲಾಗಿತ್ತು.

