ಮಂಗಳೂರು: ಬಂಟ ಸಮುದಾಯದ ಗ್ರಾಮ ಪ್ರತಿನಿಧಿಗಳನ್ನು ಒಂದೆಡೆ ಸೇರಿಸಿ, ಸರಕಾರದ ವಿವಿಧ ಜನಪರ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಬಂಟರ ಸಂಘದ ವಿನೂತನ ಕಾರ್ಯಕ್ರಮ ಸರ್ವರಿಗೂ ಮಾದರಿಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟರು.

ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನಗರದ ಪುರಭವನದಲ್ಲಿ ನಡೆದ ಶೈಕ್ಷಣಿಕ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಹಾಗೂ ಗ್ರಾಮ ಪ್ರತಿನಿಧಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಂತಹ ವಿಶಾಲ ದೇಶದಲ್ಲಿ ವ್ಯವಸ್ಥೆಯಲ್ಲಿನ ದೋಷಗಳು ಹಾಗೂ ಮಾಹಿತಿಯ ಕೊರತೆಯಿಂದಾಗಿ ಸರಕಾರದ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಹೃದಯ ವೈಶಾಲ್ಯತೆಗೆ ಹೆಸರಾದ ಬಂಟ ಸಮುದಾಯ ಹಮ್ಮಿಕೊಂಡಿರುವ ಈ ವಿಶಿಷ್ಟ ಕಾರ್ಯಕ್ರಮ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ದೇಶದಲ್ಲೇ ಅದ್ವಿತೀಯ ಸಾಧನೆ ಮಾಡಿವೆ. ಆದರೆ, ಈ ಭಾಗದ ಮಕ್ಕಳು ದೇಶದ ಆಡಳಿತಾತ್ಮಕ ಹುದ್ದೆಗಳಲ್ಲಿ ಕಡಿಮೆ ಸಂಖ್ಯೆಯಲ್ಲಿರುವುದು ವಿಷಾದನೀಯ. ವಿದ್ಯಾರ್ಥಿಗಳು ಉನ್ನತ ಗುರಿ ಹೊಂದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವತ್ತ ಗಮನಹರಿಸಬೇಕು ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಎಂ. ಆಳ್ವ ಮಾತನಾಡಿ, ಮಕ್ಕಳ ಸಾಧನೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಪ್ರೋತ್ಸಾಹದಾಯಕವಾಗಿವೆ ಎಂದರು. ಶಾಸಕ ವೈ. ಭರತ್ ಶೆಟ್ಟಿ ಅವರು ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ 137 ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ಯಶೋದ ಯು. ಶೆಟ್ಟಿ, ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಹಾಗೂ ಕೃಷ್ಣ ಪ್ರಸಾದ್ ರೈ ಅವರನ್ನು ಸನ್ಮಾನಿಸಲಾಯಿತು.
ಸಂಘದ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮಮೋಹನ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಮಂಗಳೂರು ತಾಲೂಕಿನ ವಿವಿಧ ಬಂಟರ ಸಂಘಗಳ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ, ವಸಂತ ಶೆಟ್ಟಿ, ಸಂತೋಷ್ ಶೆಟ್ಟಿ ಶೆಡ್ಡೆ, ರವೀಂದ್ರ ರೈ ಕಲ್ಲಿಮಾರು, ತಿಮ್ಮಯ್ಯ ಶೆಟ್ಟಿ, ಆನಂದ ಶೆಟ್ಟಿ, ಸುಧಾಕರ ಆಳ್ವ, ಮಹಾಬಲ ಚೌಟ, ರತ್ನಾಕರ ಶೆಟ್ಟಿ ಎಕ್ಕಾರ್, ಸತ್ಯಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು ಸ್ವಾಗತಿಸಿದರು. ಡಾ. ಮಂಜುಳಾ ಶೆಟ್ಟಿ ಹಾಗೂ ಪ್ರಕಾಶ್ ಮೇಲಂಟ ಕಾರ್ಯಕ್ರಮ ನಿರೂಪಿಸಿದರು. ಸಹ ಸಂಚಾಲಕ ಅಶ್ವತ್ಥಾಮ ಹೆಗ್ಡೆ ವಂದಿಸಿದರು.

