Site icon Ullalavani

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರಿಗೆ ಮುಕ್ತಗೊಳಿಸಲು ಆಗ್ರಹ – ವಾಹನಗಳ ಬೃಹತ್ ರ‍್ಯಾಲಿ

ಉಡುಪಿ, ನ.23 : ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಿಂದ ಕಾರ್ಕಳದವರೆಗೆ ಬೃಹತ್ ವಾಹನ ರ‍್ಯಾಲಿ ನಡೆಯಿತು. ಬೆಂಗಳೂರಿನ ಪರಶುರಾಮ ಥೀಮ್ ಪಾರ್ಕ್ ಜನಾಗ್ರಹ ಸಮಿತಿಯ ನೇತೃತ್ವದಲ್ಲಿ ನಡೆದ ಈ ರ‍್ಯಾಲಿಯಲ್ಲಿ 500ಕ್ಕೂ ಅಧಿಕ ವಾಹನಗಳಲ್ಲಿ ಕಾರ್ಯಕರ್ತರು ಕಾರ್ಕಳಕ್ಕೆ ಆಗಮಿಸಿದರು. ಬಳಿಕ ಕಾರ್ಕಳದಲ್ಲಿ ಜನಾಗ್ರಹ ಸಭೆ ಆಯೋಜಿಸಲಾಗಿದ್ದು, ಥೀಮ್ ಪಾರ್ಕ್ ಯೋಜನೆಯನ್ನು ಪೂರ್ಣಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.

ಜನಾಗ್ರಹ ಸಭೆಯನ್ನುದ್ದೇಶಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾರ್ಕಳದ ಹೆಮ್ಮೆಯ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರ ಕನಸಿನ ಯೋಜನೆಯಾದ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಲು ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡುತ್ತಿಲ್ಲ. ರಾಜಕೀಯ ದ್ವೇಷದಿಂದ ಯೋಜನೆಯ ಅಭಿವೃದ್ಧಿಗೆ ತಡೆಯೊಡ್ಡಲಾಗುತ್ತಿದೆ ಎಂದು ದೂರಿದರು. ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಕಾರ್ಕಳದ ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಆರೋಪಿಸಿದರು. ಮೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಿ ಮರುವಿನ್ಯಾಸಗೊಳಿಸುವ ಉದ್ದೇಶದಿಂದ ಶಿಲ್ಪಿಗಳು 2023ರ ಸೆಪ್ಟೆಂಬರ್‌ನಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದರ ಆಧಾರದಲ್ಲಿ ಅಕ್ಟೋಬರ್ 4ರಂದು ಜಿಲ್ಲಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿ, ತಹಶೀಲ್ದಾರ್ ಮೂಲಕ ಸಾರ್ವಜನಿಕ ಪ್ರಕಟಣೆಯನ್ನೂ ನೀಡಿದ್ದರು ಎಂದು ತಿಳಿಸಿದರು. ಆದರೆ, ಮರುವಿನ್ಯಾಸದ ಕೆಲಸ ಆರಂಭವಾದ ಸಂದರ್ಭದಲ್ಲಿ ಮೂರ್ತಿ ಕಳ್ಳತನವಾಗಿದೆ ಎಂಬ ವದಂತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಹರಡಿ ಪ್ರತಿಭಟನೆ ನಡೆಸಿದರು ಎಂದು ಸುನಿಲ್ ಕುಮಾರ್ ಆರೋಪಿಸಿದರು.ಬೃಹತ್ ವಾಹನ ರ‍್ಯಾಲಿ ಹಾಗೂ ಜನಾಗ್ರಹ ಸಭೆಯ ಹಿನ್ನೆಲೆಯಲ್ಲಿ ಉಮಿಕಲ್ ಬೆಟ್ಟದಲ್ಲಿರುವ ಥೀಮ್ ಪಾರ್ಕ್ ಪ್ರದೇಶಕ್ಕೆ ತೆರಳದಂತೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು. ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿತ್ತು. ಕಾರ್ಕಳದ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಪಡೆದಿರುವ ಪರಶುರಾಮ ಥೀಮ್ ಪಾರ್ಕ್ ವಿಚಾರ ಇದೀಗ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.

Exit mobile version