ಉಳ್ಳಾಲ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸೋಮೇಶ್ವರ ಮತ್ತು ದೇರಳಕಟ್ಟೆ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಬುಧವಾರ ಮಾಡೂರಿನ ವಿಶ್ವಭಾರತಿ ಸಭಾಂಗಣದಲ್ಲಿ ನಡೆಯಿತು.
ಕೊಂಡಾಣ ಶ್ರೀ ಶಿವಯೋಗಿ ಶಿವದುರ್ಗಾನಂದ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಧರ್ಮದ ಹಾದಿಯಲ್ಲಿ ಸಾಗುವಾಗ ಅಧರ್ಮ ಎದುರಾಗುವುದು ಸಹಜ. ಜೀವನದಲ್ಲಿ ಕಲ್ಮಶಗಳು ಬಂದರೂ ಅವುಗಳನ್ನು ನಿವಾರಿಸಿಕೊಂಡು ಮುನ್ನಡೆಯಬೇಕು. ಧರ್ಮಸ್ಥಳ ಕ್ಷೇತ್ರದಲ್ಲಿ ಅನ್ನದಾನ, ವಿದ್ಯಾದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಪ್ರತಿಯೊಬ್ಬರೂ ಧರ್ಮದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ, ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಶ್ರೇಷ್ಠ ಕಾರ್ಯವಾಗಿದ್ದು, ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಇಂತಹ ಸೇವಾ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಂಗಳೂರು ತಾಲೂಕು ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ಮಾತನಾಡಿ, ಮದ್ಯವರ್ಜನ ಶಿಬಿರಗಳ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀಡುತ್ತಿರುವ ಕೊಡುಗೆ ಅಪಾರ. ತುರ್ತು ಸಂದರ್ಭಗಳಲ್ಲಿ ರಕ್ತದಾನ ಜೀವ ಉಳಿಸುವ ಮಹತ್ವದ ಸೇವೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮೇಶ್ವರ ವಲಯಾಧ್ಯಕ್ಷೆ ಪ್ರಭಾವತಿ ಆರ್. ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ಬೋಳಿಯಾರ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುನೀತಾ, ನಿಟ್ಟೆ ವಿಶ್ವವಿದ್ಯಾಲಯದ ಬ್ಲಡ್ ಸೆಂಟರ್ ವೈದ್ಯಾಧಿಕಾರಿ ಡಾ. ಮಂಜುಶ್ರೀ ಪೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಮಂಗಳೂರು ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ರವಿಶಂಕರ್ ಸೋಮೇಶ್ವರ, ದಿವ್ಯಾ ಸತೀಶ್, ಪ್ರವೀಣ್ ಬಗಂಬಿಲ, ಶ್ರೀನಿವಾಸ ಶೆಟ್ಟಿ ಹಾಗೂ ಸತೀಶ್ ದೀಪಂ ಉಪಸ್ಥಿತರಿದ್ದರು.
ಶಿಬಿರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು. ಸೋಮೇಶ್ವರ ವಲಯ ಮೇಲ್ವಿಚಾರಕ ಮೋಹನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ದೇರಳಕಟ್ಟೆ ವಲಯ ಮೇಲ್ವಿಚಾರಕ ಅಶೋಕ್ ನಾಯಕ್ ವಂದಿಸಿದರು.