ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಮತ್ತೆ ಮುನ್ನೆಲೆಗೆ ಬಂದಿದೆ. ನಿಗಮ ಮಂಡಳಿಗಳ ನೇಮಕಾತಿ ಹಾಗೂ ಪಕ್ಷದ ವಿವಿಧ ಹುದ್ದೆಗಳ ಹಂಚಿಕೆಯಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇಂದು ಸಂಜೆ ಮಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಬಹಿರಂಗವಾಗಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಿರಿಯ ಕಾರ್ಯಕರ್ತ ಕರುಣಾಕರ ಶೆಟ್ಟಿ ಅವರು ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಸಂದರ್ಭದಲ್ಲಿ ಉಸ್ತುವಾರಿ ಸಚಿವರನ್ನು ಇತರ ಮುಖಂಡರ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಸುಮಾರು 35 ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ಈಗಾಗಲೇ ಅಧಿಕಾರ ಹಾಗೂ ಅವಕಾಶ ಪಡೆದವರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಜಿಲ್ಲಾ ಅಧ್ಯಕ್ಷರಿಗೆ ಮನವಿ ಸಲ್ಲಿಸಬೇಕೇ? ಜಿಲ್ಲಾ ಅಧ್ಯಕ್ಷರು ಪಕ್ಷಕ್ಕೆ ಯಾವಾಗ ಬಂದವರು? ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸದೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಿರ್ಧಾರದ ಹಿಂದೆ ಯಾರಿದ್ದಾರೆ? ಕಾರ್ಯಕರ್ತರ ನಿಜವಾದ ಅಭಿಪ್ರಾಯ ಏನಿತ್ತು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಮ್ಮನ್ನು ನಿರ್ಲಕ್ಷಿಸಿದರೆ ಮುಂದಿನ ಕ್ರಮ ಏನು ಎಂಬುದು ನಮಗೂ ಗೊತ್ತಿದೆ. ಪಕ್ಷಕ್ಕಾಗಿ ದಶಕಗಳ ಕಾಲ ದುಡಿದವರು ನಾವು. ಕಳೆದುಕೊಳ್ಳಲು ನಮ್ಮ ಬಳಿ ಏನೂ ಇಲ್ಲ. ಈ ವಿಚಾರದಲ್ಲಿ ನಾಯಕರು ಯೋಚನೆ ಮಾಡಬೇಕು ಎಂದು ಕರುಣಾಕರ ಶೆಟ್ಟಿ ಅವರು ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ. ಸಚಿವರು ಹಾಗೂ ಇತರ ಮುಖಂಡರು ಸಮಾಧಾನಪಡಿಸಲು ಪ್ರಯತ್ನಿಸಿದರೂ ಅವರು ಸಮಾಧಾನಗೊಳ್ಳದೆ ಅಲ್ಲಿಂದ ಹೊರನಡೆದಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಯ ನಂತರ ಸುಮಾರು 30 ಮಂದಿ ಹಿರಿಯ ಕಾಂಗ್ರೆಸ್ ಮುಖಂಡರು ಕರುಣಾಕರ ಶೆಟ್ಟಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದು, ನಗರದ ಹೋಟೆಲ್ವೊಂದರಲ್ಲಿ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಕ್ಷದೊಳಗಿನ ಅಸಮಾಧಾನ, ಹಿರಿಯ ಕಾರ್ಯಕರ್ತರ ಕಡೆಗಣನೆ ಹಾಗೂ ಮುಂದಿನ ರಾಜಕೀಯ ನಡೆ ಕುರಿತು ಇನ್ನಷ್ಟು ಹಿರಿಯ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿಯೂ ಅಸಮಾಧಾನ ವ್ಯಕ್ತವಾಗಿತ್ತು. ಸಚಿವ ಖಾದರ್ ಭಾಷಣ ಮಾಡಿದ ಬಳಿಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ವಂದನಾರ್ಪಣೆ ಮಾಡಿದ್ದ ವಿಚಾರಕ್ಕೆ ಕಾರ್ಯಕರ್ತರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು ಎನ್ನಲಾಗಿದೆ. ಪಕ್ಷದ ಕಾರ್ಯಕ್ರಮಗಳಲ್ಲಿ ಹಿರಿಯ ಕಾರ್ಯಕರ್ತರಿಗೆ ಸೂಕ್ತ ಗೌರವ ಮತ್ತು ಪ್ರಾತಿನಿಧ್ಯ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಚುನಾವಣೆಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ನಾಯಕರು ತಳಮಟ್ಟದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಅಸಮಾಧಾನವೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಬೆಳೆಸಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿ ಹಾಗೂ ಆಸ್ಕರ್ ಫೆರ್ನಾಂಡಿಸ್ ಅವರ ಕಾಲದಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಮತ್ತು ಅವರ ಅನುಯಾಯಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಆಗ್ರಹ ಹಿರಿಯ ಕಾಂಗ್ರೆಸ್ಸಿಗರಿಂದ ವ್ಯಕ್ತವಾಗಿದೆ.
ಜಿಲ್ಲಾ ಕಾಂಗ್ರೆಸ್ನಲ್ಲಿ ಕೆಲವೇ ನಾಯಕರ ಹಿಡಿತ ಹೆಚ್ಚಾಗುತ್ತಿದ್ದು, ಪಕ್ಷದ ಸಂಘಟನಾತ್ಮಕ ನಿರ್ಧಾರಗಳಲ್ಲಿ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯಕ್ಕೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಬೆಳವಣಿಗೆಗಳ ಕುರಿತು ಕೆಪಿಸಿಸಿಗೆ ಮಾಹಿತಿ ನೀಡಿ, ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಮತ್ತು ಕಾರ್ಯಕರ್ತರ ಪ್ರಾತಿನಿಧ್ಯದ ವಿಚಾರವನ್ನು ರಾಜ್ಯ ನಾಯಕರ ಗಮನಕ್ಕೆ ತರಲು ಕೆಲವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಿ.ಕೆ. ಹರಿಪ್ರಸಾದ್ ಅವರ ಮಂಗಳೂರು ಭೇಟಿ ಸಂದರ್ಭದಲ್ಲಿ ಈ ಆಂತರಿಕ ಭಿನ್ನಮತದ ವಿಚಾರ ಅವರ ಗಮನಕ್ಕೆ ಬರಲಿದೆಯೇ? ದಕ್ಷಿಣ ಕನ್ನಡ ಕಾಂಗ್ರೆಸ್ನ ಹಿರಿಯ ಕಾರ್ಯಕರ್ತರ ಅಸಮಾಧಾನಕ್ಕೆ ರಾಜ್ಯ ನಾಯಕತ್ವ ಸ್ಪಂದಿಸಲಿದೆಯೇ? ದಶಕಗಳ ಕಾಲ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ನಿಗಮ ಮಂಡಳಿ ಹಾಗೂ ಪಕ್ಷದ ಹುದ್ದೆಗಳಲ್ಲಿ ಸೂಕ್ತ ಅವಕಾಶ ಸಿಗಲಿದೆಯೇ? ಎಂಬ ಪ್ರಶ್ನೆಗಳು ಇದೀಗ ಜಿಲ್ಲಾ ಕಾಂಗ್ರೆಸ್ನಲ್ಲಿ ಚರ್ಚೆಯಾಗುತ್ತಿವೆ.


